



ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯು ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನು ಬಂಧಿಸಿದೆ.


ಜಿಲ್ಲಾ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಪಡೆದು ಸೈಬರ್ ವಂಚನೆಯ ಹಣದ ವಹಿವಾಟಿಗೆ ಬಳಸಲು ಸಹಕರಿಸುತ್ತಿದ್ದ ಕೊಳ್ನಾಡು ಕುಡ್ತಮುಗೇರು ನಿವಾಸಿ 32 ವರ್ಷದ ಜುಬೈರ್ ಎಂಬಾತನನ್ನು ಜುಲೈ 3ರಂದು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪೊಲೀಸರ ವಿಚಾರಣೆಯಲ್ಲಿ, ಜುಬೈರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯ ಒಂದು ಪ್ರಕರಣ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.
ಇದಲ್ಲದೆ, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನೂ ಇದೀಗ ಜಿಲ್ಲಾ ಸೈಬರ್ ಅಪರಾಧ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸೈಬರ್ ವಂಚನೆ ಪ್ರಕರಣಗಳ ವಿರುದ್ಧ ಜಿಲ್ಲಾ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಅಥವಾ ಓಟಿಪಿ ಮಾಹಿತಿಯನ್ನು ಅಪರಿಚಿತರಿಗೆ ನೀಡದಂತೆ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.
