




ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ವತಿಯಿಂದ ಮಂಗಳೂರಿನ ಗುರುಪುರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಹಾಗೂ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜನಸಾಮಾನ್ಯರ ಬದುಕು ದುಸ್ತರವಾಗಿದ್ದು, ತೆರಿಗೆ ಹಾಗೂ ನೋಂದಣಿ ಶುಲ್ಕಗಳ ಹೆಚ್ಚಳದಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಶಾಸಕ ಡಾ. ವೈ. ಭರತ್ ಶೆಟ್ಟಿ ಆರೋಪಿಸಿದರು. ಕಳೆದ ಮೂರೂವರೆ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಿಗೆ ಒಂದೇ ಒಂದು ಕೊಠಡಿ ನಿರ್ಮಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಖಾಸಗಿ ಸಂಸ್ಥೆಗಳ ಸಿಎಸ್‌ಆರ್ ಅನುದಾನವನ್ನು ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಅಧಿಕಾರಿಗಳ ವರ್ಗಾವಣೆಯಲ್ಲೂ ಲಂಚದ ಆರೋಪಗಳು ಕೇಳಿಬರುತ್ತಿವೆ ಎಂದು ಅವರು ಆರೋಪಿಸಿದರು. ಮುಂಬರುವ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. ವಾಲ್ಮೀಕಿ ನಿಗಮದ ಹಣದ ದುರುಪಯೋಗ, ಗ್ರಾಮ ಪಂಚಾಯಿತಿಗಳಿಗೆ ಅನುದಾನದ ಕೊರತೆ ಹಾಗೂ ಸರ್ಕಾರಿ ಹುದ್ದೆಗಳ ಭರ್ತಿಯಾಗದಿರುವ ವಿಚಾರಗಳನ್ನು ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನದ ಕೊರತೆ ಎದುರಾಗಿದ್ದು, ವಸತಿ ಯೋಜನೆ, ವೃದ್ಧಾಪ್ಯ ವೇತನ ಮತ್ತು ವಿಧವಾ ವೇತನದ ವಿಚಾರದಲ್ಲಿಯೂ ಜನರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು. ಗ್ರಾಮ ಪಂಚಾಯತ್ ಮಟ್ಟದಿಂದಲೇ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸಿ, ಸರ್ಕಾರದ ವಿರುದ್ಧದ ಹೋರಾಟವನ್ನು ಮುಂದುವರಿಸುವುದಾಗಿ ತಿಳಿಸಿದರು.
ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲದ ವತಿಯಿಂದ ನಡೆದ ಈ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಂಡಲದ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
