ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆ ನೀಡಿದೆ. ಈ ವಾರವಿಡೀ ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಮಾರ್ಚ್‌ 17 ಹಾಗೂ 18ರಂದು ರಾಜಧಾನಿ ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಬೀದರ್ ಜಿಲ್ಲೆಯಲ್ಲಿ ಗರಿಷ್ಠ 4 ಸೆಂ.ಮೀ ಮಳೆ ದಾಖಲಾಗಿದೆ. ಉಳಿದಂತೆ ಬಾಗಲಕೋಟೆಯ ಇಳಕಲ್ ಹಾಗೂ ಚಿಕ್ಕಮಗಳೂರಿನ ಕಳಸದಲ್ಲಿ ತಲಾ 2 ಸೆಂ.ಮೀ, ಕೊಡಗಿನ ಭಾಗಮಂಡಲ ಮತ್ತು ಉತ್ತರ ಕನ್ನಡದ ಮುಂಡಗೋಡಿನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ ಸೇರಿದಂತೆ ವಿವಿಧೆಡೆ ತುಂತುರು ಮಳೆಯಾಗಿದೆ.

ಯಾವ ಜಿಲ್ಲೆಗಳಲ್ಲಿ ಮಳೆ?

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು, ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಸಮಯದಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಂಭವವಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಜಿಲ್ಲೆಯ ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಇಲ್ಲೂ ಸಹ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಶುಷ್ಕ ಹವಾಮಾನ ಇರಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.