ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ನಿವಾಸಿ ಮಹಮ್ಮದ್ ಶರೀಫ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿಬಂದಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರ ಸಹೋದರ ನಾಸಿರುದ್ದೀನ್ ಪಿ ನೀಡಿದ ದೂರಿನ ಪ್ರಕಾರ, ಮೇ 14ರಂದು ಮನೆಯಲ್ಲಿದ್ದ ಹೋರಿ ಹಾಯ್ದು ಮಹಮ್ಮದ್ ಶರೀಫ್ ಗಾಯಗೊಂಡಿದ್ದರು. ಬಳಿಕ ಅವರನ್ನು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಆದರೆ ಆಸ್ಪತ್ರೆಯ ವೈದ್ಯರು ನಿರ್ಲಕ್ಷ್ಯದಿಂದ ಚಿಕಿತ್ಸೆ ನೀಡಿದ್ದರಿಂದ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೇ 20ರಂದು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ.

ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ವೈದ್ಯರ ನಿರ್ಲಕ್ಷ್ಯದ ಆರೋಪಗಳ ಪರಿಶೀಲನೆಗಾಗಿ ವೈದ್ಯಕೀಯ ತಂಡದ ವರದಿ ಕೋರಲಾಗಿದ್ದು, ವರದಿ ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.