ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೂರಿನಕಟ್ಟೆ ಮರುನಿರ್ಮಾಣದ ವಿಚಾರವಾಗಿ ಎರಡು ಸಮುದಾಯಗಳ ನಡುವೆ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕ್ಷಣಕ್ಷಣಕ್ಕೂ ಉದ್ವಿಗ್ನ ವಾತಾವರಣ ಸೃಷ್ಟಿಯಾಗುತ್ತಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮೇ 25ರಿಂದ 27ರವರೆಗೆ ಭಟ್ಕಳ ಪಟ್ಟಣ ಹಾಗೂ ಜಾಲಿ ಪಂಚಾಯತ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಐದು ಅಥವಾ ಅದಕ್ಕಿಂದ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಿ ಭಟ್ಕಳ ಎಸಿಯಿಂದ ಆದೇಶಿಸಿದ್ದಾರೆ.

ಏನಿದು ವಿವಾದ?
ಮೂರಿನಕಟ್ಟೆಯನ್ನು ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ಅಗಲೀಕರಣದ ಸಂದರ್ಭದಲ್ಲಿ ತೆರವುಗೊಳಿಸಲಾಗಿತ್ತು. ಆದರೆ, ಹೆದ್ದಾರಿ ಕಾಮಗಾರಿ ಮುಕ್ತಾಯಗೊಂಡ ಬಳಿಕ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸುಪರ್ದಿಯಲ್ಲಿರುವ ಅದೇ ಜಾಗದಲ್ಲಿ ಹಿಂದೂ ಕಾರ್ಯಕರ್ತರು ಕಟ್ಟೆಯನ್ನು ಮರುನಿರ್ಮಾಣ ಮಾಡಿದ್ದರು. ಈ ಮರುನಿರ್ಮಾಣಕ್ಕೆ ಮುಸ್ಲಿಂ ಸಂಘಟನೆಗಳು ಹಾಗೂ ಸಮುದಾಯದ ಪ್ರಮುಖರಿಂದ ತೀವ್ರ ವಿರೋಧ ವ್ಯಕ್ತವಾಗಿ, ಕಟ್ಟೆಯನ್ನು ತೆರವುಗೊಳಿಸುವಂತೆ ಆಗ್ರಹಿಸಿದರು.

ಭಾನುವಾರ (ಮೇ 24) ಮುಸ್ಲಿಂ ಸಮುದಾಯದ ನೂರಾರು ಜನರು ಏಕಾಏಕಿ ಮೂರಿನಕಟ್ಟೆ ಜಾಗದಲ್ಲಿ ಜಮಾಯಿಸಿದ್ದರು. ಮರುನಿರ್ಮಾಣಗೊಂಡಿದ್ದ ಕಟ್ಟೆಯನ್ನು ಒಡೆದುರುಳಿಸಲು ಮುಂದಾದಾಗ, ಸ್ಥಳದಲ್ಲಿದ್ದ ಪೊಲೀಸರು ಅವರನ್ನು ತಡೆಯಲು ಯತ್ನಿಸಿದರು. ಈ ವೇಳೆ ತೀವ್ರ ಘರ್ಷಣೆ ಸಂಭವಿಸಿದ್ದು, ಮುಸ್ಲಿಮರು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ.