


ಮಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯನ್ನು ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದೊಂದಿಗೆ ವಿಲೀನಗೊಳಿಸಿ, ಕಾರ್ಮಿಕರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ. ಭರತ್ ಶೆಟ್ಟಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಶಾಸಕ ಭರತ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗ ಅವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆ ಮತ್ತು ಬಂಡವಾಳ ಹೂಡಿಕೆಗೆ ವಿಶೇಷ ಆದ್ಯತೆ ನೀಡುವಂತೆ ಆಗ್ರಹಿಸಿದರು.


ರಾಜ್ಯ ಸರ್ಕಾರದಿಂದ ಗಣಿಗಾರಿಕೆ ಅನುಮತಿ ಸಿಗದ ಕಾರಣ ಕುದುರೆಮುಖ ಸಂಸ್ಥೆಯ ಕಾರ್ಯಾಚರಣೆಗೆ ತೀವ್ರ ತೊಡಕಾಗಿದ್ದು, ಕಾರ್ಮಿಕರ ಭವಿಷ್ಯವೂ ಅತಂತ್ರವಾಗಿದೆ ಎಂದು ಅವರು ತಿಳಿಸಿದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ಗಣಿಗಾರಿಕೆ ಅನುಮತಿ ನೀಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
ಕುದುರೆಮುಖ ಸಂಸ್ಥೆಯನ್ನು ಎನ್‌ಎಂಡಿಸಿಯೊಂದಿಗೆ ವಿಲೀನಗೊಳಿಸಿದರೆ ಕಂಪನಿಯ ಪುನಶ್ಚೇತನ ಸಾಧ್ಯವಾಗಲಿದ್ದು, ಕರಾವಳಿ ಭಾಗದ ಕೈಗಾರಿಕಾ ಅಭಿವೃದ್ಧಿಗೂ ಹೊಸ ವೇಗ ದೊರೆಯಲಿದೆ ಎಂದು ಶಾಸಕ ಭರತ್ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.
