ಕುಕ್ಕೆ ಸುಬ್ರಹ್ಮಣ್ಯ: ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು ಮಂಗಳವಾರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ರಾಜ್ಯಸಭೆ ಚುನಾವಣೆ, ಡೀಮ್ಡ್ ಅರಣ್ಯ ಸಮಸ್ಯೆ, ಪ್ಲಾಸ್ಟಿಕ್ ನಿಯಂತ್ರಣ ಹಾಗೂ ಕುಮಾರಧಾರಾ ನದಿ ಮಾಲಿನ್ಯ ಕುರಿತಂತೆ ಮಹತ್ವದ ಹೇಳಿಕೆಗಳನ್ನು ನೀಡಿದರು.

Screenshot

ರಾಜ್ಯಸಭೆ ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ದೆಹಲಿಯಲ್ಲಿ ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಊಹಾತ್ಮಕ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಏಕಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕಾಗಿ ನಾಲ್ಕೂ ಪ್ರವೇಶ ದ್ವಾರಗಳಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಲು ಸೂಚನೆ ನೀಡಿರುವುದಾಗಿ ಹೇಳಿದರು. ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ಬಾಟಲಿ ಹಾಗೂ ತಟ್ಟೆಗಳು ಬಿದ್ದಿರುವುದನ್ನು ಗಮನಿಸಿ ಅಧಿಕಾರಿಗಳ ಸಭೆ ನಡೆಸಿ ಎರಡು ಹಂತದ ತಪಾಸಣೆ ವ್ಯವಸ್ಥೆ ಜಾರಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಡೀಮ್ಡ್ ಅರಣ್ಯ ಸಮಸ್ಯೆ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 3.33 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಅರಣ್ಯ ಎಂದು ಗುರುತಿಸಲಾಗಿದ್ದು, ಅದರಲ್ಲಿ ಸರ್ಕಾರಿ ಕಟ್ಟಡಗಳು ಮತ್ತು ಪಟ್ಟಾ ಭೂಮಿಗಳೂ ಸೇರಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದು ವಿವರಿಸಿದರು. ಸಮಸ್ಯೆ ಪರಿಹಾರಕ್ಕಾಗಿ ಕಂದಾಯ ಇಲಾಖೆಯೊಂದಿಗೆ ಜಂಟಿ ಸರ್ವೆ ನಡೆಯುತ್ತಿದೆ ಎಂದರು.

ಮಾನವ-ವನ್ಯಜೀವಿ ಸಂಘರ್ಷ ತಡೆಗಾಗಿ ಡ್ರೋನ್ ಸೇರಿದಂತೆ ಆಧುನಿಕ ತಂತ್ರಜ್ಞಾನ ಬಳಕೆಯಾಗುತ್ತಿದ್ದು, ಕಮಾಂಡ್ ಸೆಂಟರ್ ಕೂಡ ಆರಂಭಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಕುಮಾರಧಾರಾ ನದಿಗೆ ಸಂಸ್ಕರಿಸದ ತ್ಯಾಜ್ಯ ನೀರು ಹರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು, ನಿಯಮ ಉಲ್ಲಂಘನೆ ಮರುಕಳಿಸಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸ್ಪಷ್ಟಪಡಿಸಿದರು.