

ರಾಜ್ಯ ರಾಜಕಾರಣದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಚರ್ಚೆ ಜೋರಾಗಿದ್ದು, ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಆಪ್ತ ವಲಯದಲ್ಲಿ ಹೊಸ ರಾಜಕೀಯ ಲೆಕ್ಕಾಚಾರ ಆರಂಭವಾಗಿದೆ. ಇದರ ನಡುವೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ಸಿಗಬಹುದೇ ಎಂಬ ಪ್ರಶ್ನೆ ದಕ್ಷಿಣ ಕನ್ನಡ ಜಿಲ್ಲೆಯ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಹೈಕಮಾಂಡ್ ಹೊಸ ತಂತ್ರ ರೂಪಿಸುತ್ತಿದೆ ಎನ್ನಲಾಗುತ್ತಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಪುತ್ತೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದೇ ರಾಜ್ಯ ನಾಯಕರ ಗಮನ ಸೆಳೆದಿದೆ.


ಇದೀಗ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಸಂಘಟನೆ ಗಟ್ಟಿಗೊಳಿಸಲು ಪ್ರಭಾವಿ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅಶೋಕ್ ಕುಮಾರ್ ರೈ ಹೆಸರು ಕೂಡ ಕೇಳಿಬರುತ್ತಿದೆ.
ಒಂದೆಡೆ ಜಾತಿ ಸಮೀಕರಣ, ಮತ್ತೊಂದೆಡೆ ಕರಾವಳಿ ರಾಜಕೀಯ ಸಮತೋಲನ ಹಾಗೂ ಮುಂಬರುವ ಚುನಾವಣಾ ಲೆಕ್ಕಾಚಾರ ಸೇರಿ ಕಾಂಗ್ರೆಸ್ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ ಎನ್ನಲಾಗುತ್ತಿದೆ. ಆದರೆ ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ನಿರ್ಧಾರ ಹೈಕಮಾಂಡ್ ಮಟ್ಟದಲ್ಲೇ ಕೈಗೊಳ್ಳಲಾಗುತ್ತದೆ.
ಈ ರಾಜಕೀಯ ಬೆಳವಣಿಗೆ ಕರಾವಳಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಮಹತ್ವದ ಘೋಷಣೆ ಹೊರಬರುವ ನಿರೀಕ್ಷೆ ಇದೆ.
