ಬಂಟ್ವಾಳ: ಅಕ್ರಮ ಜಾನುವಾರು ವಧೆ ನಡೆಸುತ್ತಿದ್ದ ಆರೋಪದ ಮೇಲೆ ಬಂಟ್ವಾಳ ನಗರ ಪೊಲೀಸರು ಇಬ್ಬರನ್ನು ಬಂಧಿಸಿ, 06 ಜಾನುವಾರುಗಳು, ಕತ್ತರಿಸಲಾದ ಮಾಂಸ, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಮೇ 27ರ ರಾತ್ರಿ, ಸಜಿಪಮೂಡ ಗ್ರಾಮದ ಪಂಜಾಜೆ ಪ್ರದೇಶದಲ್ಲಿ ಅಕ್ರಮ ಜಾನುವಾರು ವಧೆ ನಡೆಯುತ್ತಿರುವ ಮಾಹಿತಿ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿರವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಈ ವೇಳೆ ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿ ಮಾಂಸ ಕತ್ತರಿಸುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರು ಮುಸ್ತಾಪ್ (33) ಹಾಗೂ ಮಹಮ್ಮದ್ ಸಾದೀಕ್ (30) ಎಂದು ಗುರುತಿಸಲಾಗಿದೆ.

ಆರೋಪಿಗಳು ಪರವಾನಿಗೆ ಇಲ್ಲದೆ ಅಕ್ರಮವಾಗಿ ಜಾನುವಾರು ವಧೆ ನಡೆಸುತ್ತಿರುವುದು ದೃಢಪಟ್ಟ ಹಿನ್ನೆಲೆ, ಸ್ಥಳದಲ್ಲಿದ್ದ 6 ಜಾನುವಾರುಗಳು, ಮಾಂಸ ಹಾಗೂ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.