



ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಪೆರಿಯಾಲ್ತಡ್ಕ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕ ಜೂಜಾಟದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಹಲವರು ಸ್ಥಳದಿಂದ ಪರಾರಿಯಾಗಿದ್ದು, ದಿವಾಕರ ಪೂಜಾರಿ ಹಾಗೂ ಯಶ್ವಂತ್ ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರಿಂದ ಜೂಜಾಟಕ್ಕೆ ಬಳಸಲಾಗಿದ್ದ ಒಟ್ಟು 4,145 ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ನಾಲ್ಕು ಕೋಳಿಗಳು, ಕೋಳಿಗಳ ಕಾಲಿಗೆ ಕಟ್ಟುವ ಹತ್ತು ಹರಿತವಾದ ಬಾಳುಗಳು ಹಾಗೂ ಇತರೆ ಸಾಮಗ್ರಿಗಳನ್ನು ಕೂಡ ಜಪ್ತಿ ಮಾಡಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಆದರ್ಶ್ ಚಿಕನ್ ಸೆಂಟರ್ ಮಾಲೀಕ ಸಂತೋಷ್ ನಾಯ್ಕ ಕೋಳಿ ಅಂಕ ಆಯೋಜನೆ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದ್ದು, ಈತನ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ, ಪ್ರಾಣಿ ಕ್ರೌರ್ಯ ತಡೆ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
