



ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಡಿ.ಕೆ. ಶಿವಕುಮಾರ್ (DK Shivakumar) ಅವರು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಮತ್ತು ಪಕ್ಷದ ನಾಯಕರಿಗೆ ಅತ್ಯಂತ ಕಠಿಣ ಸಂದೇಶ ರವಾನಿಸಿದ್ದಾರೆ. ಆಡಳಿತ ಮತ್ತು ಪಕ್ಷದ ಸಂಘಟನೆಯಲ್ಲಿ ಯಾವುದೇ ರೀತಿಯ ಮೈಗಳ್ಳತನವನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿಯಾದ ಬೆನ್ನಲ್ಲೇ ಸಚಿವರ ಸಭೆ ನಡೆಸಿದ ಡಿ.ಕೆ. ಶಿವಕುಮಾರ್, “ನಾನು ಯಾವ ಮಂತ್ರಿಗಳನ್ನೂ ಸುಮ್ಮನೆ ಬಿಡುವುದಿಲ್ಲ. ಎಲ್ಲರೂ 24/7 ರೀತಿ ಸಕ್ರಿಯವಾಗಿ ಕೆಲಸ ಮಾಡಬೇಕು” ಎಂದು ಖಡಕ್ ಆಗಿ ಹೇಳಿದ್ದಾರೆ. ಕೇವಲ ಬೆಂಗಳೂರಿಗೆ ಸೀಮಿತವಾಗದೆ, ಎಲ್ಲಾ ಸಚಿವರು ಮತ್ತು ಶಾಸಕರು ತಮ್ಮ ವ್ಯಾಪ್ತಿಯ ಪ್ರತಿ ಜಿಲ್ಲೆಯಲ್ಲೂ ಕಡ್ಡಾಯವಾಗಿ ಪ್ರವಾಸ ಮಾಡಿ, ಸಭೆಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಆದೇಶಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Comprehensive Revision – SIR) ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ (Congress High Command) ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಎಸ್‌ಐಆರ್ ವಿಚಾರದಲ್ಲಿ ದೊಡ್ಡ ಸಮಸ್ಯೆಯಿದೆ, ಇದನ್ನು ಯಾರೂ ಹಗುರವಾಗಿ ಪರಿಗಣಿಸುವಂತಿಲ್ಲ ಎಂದು ಎಚ್ಚರಿಸಿರುವ ಸಿಎಂ, ಚುನಾವಣಾ ವ್ಯವಸ್ಥೆಯ ಈ ಪ್ರಮುಖ ಪ್ರಕ್ರಿಯೆಯ ಕಡೆಗೆ ನಾಯಕರು ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚಿಸಿದ್ದಾರೆ.
