




ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲದಲ್ಲಿ 2023ರ ಮಾರ್ಚ್ 20ರಂದು ನಡೆದಿದ್ದ ದರೋಡೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದರೋಡೆ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್. ಅವರು ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ಆರೋಪಿಗಳಾದ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಉಪ್ಪಿನಂಗಡಿಯ ಮಾನ್ಯ ಪಿಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮನು ಬಿ.ಕೆ. ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೆ ತಲಾ ₹10 ಸಾವಿರ ದಂಡ ಹಾಗೂ 3 ವರ್ಷಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.
ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯರಾಜ ಹೆಗ್ಡೆ ಅವರು ಸರ್ಕಾರದ ಪರ ಸಮರ್ಥವಾಗಿ ವಾದ ಮಂಡಿಸಿದ್ದರು.
