




ಮಂಗಳೂರು: ನಗರದಲ್ಲಿ ಕಳೆದ ರಾತ್ರಿಯಿಂದ ಸುರಿದ ಭಾರೀ ಮಳೆಯ ಪರಿಣಾಮ ಕಂಕನಾಡಿ ಸಮೀಪ ತಡೆಗೋಡೆ ಕುಸಿದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮಹಿಳೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆಗೆ ಶಾಸಕ ವೇದವ್ಯಾಸ ಕಾಮತ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕರು, ಮೃತರ ಕುಟುಂಬಕ್ಕೆ ಯಾವುದೇ ವಿಳಂಬವಿಲ್ಲದೆ ಸೂಕ್ತ ಪರಿಹಾರ ದೊರಕುವಂತೆ ಜಿಲ್ಲಾಧಿಕಾರಿಗಳೊಂದಿಗೆ ಈಗಾಗಲೇ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದು, ಅವರ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.
ಹವಾಮಾನ ಇಲಾಖೆಯ ಮುನ್ನೆಚ್ಚರಿಕೆಯಂತೆ ಮುಂದಿನ ದಿನಗಳಲ್ಲೂ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುವ ಜನರ ಸುರಕ್ಷತೆಗೆ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು ಕೂಡ ಎಚ್ಚರಿಕೆಯಿಂದ ಇರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದ್ದಾರೆ.
