




ಮಂಗಳೂರು: ಎಸ್‌ಐಆರ್ (Special Intensive Revision) ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ, ಮತದಾರರ ಪಟ್ಟಿ ಪರಿಷ್ಕರಣೆಯೊಂದಿಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರ ಪತ್ತೆಗೆ ಬಳಸಬೇಕು ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ವಲಸಿಗರನ್ನು ಪತ್ತೆಹಚ್ಚಲು ವಿಶೇಷ ಟಾಸ್ಕ್ ಫೋರ್ಸ್ ರಚಿಸಿ, ಪೊಲೀಸ್ ಇಲಾಖೆಗೆ ಅಗತ್ಯ ಅಧಿಕಾರ ನೀಡಿ ವ್ಯಾಪಕ ತಪಾಸಣೆ ನಡೆಸುವಂತೆ ಅವರು ಆಗ್ರಹಿಸಿದ್ದಾರೆ. ಮುಕ್ಕ ಹಾಗೂ ಕೋಡಿಕಲ್ ಪ್ರದೇಶಗಳಲ್ಲಿ ಈಗಾಗಲೇ 16 ಮಂದಿ ಅಕ್ರಮ ವಲಸಿಗರು ಪತ್ತೆಯಾಗಿರುವುದನ್ನು ಉಲ್ಲೇಖಿಸಿದ ಅವರು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ಅಗತ್ಯವೆಂದರು.

ಅಕ್ರಮ ವಲಸಿಗರಿಗೆ ನಕಲಿ ದಾಖಲೆಗಳು, ಆಧಾರ್ ಕಾರ್ಡ್ ಹಾಗೂ ಬಾಡಿಗೆ ಮನೆ ವ್ಯವಸ್ಥೆ ಮಾಡಿಕೊಡುವ ಜಾಲದ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಒತ್ತಾಯಿಸಿದರು.
ಇದೇ ವೇಳೆ, ಈ ಹಿಂದೆ ನಡೆದ ಚುನಾವಣೆಗಳಲ್ಲಿ ನಕಲಿ ದಾಖಲೆಗಳ ಆಧಾರದಲ್ಲಿ ಅಕ್ರಮ ವಲಸಿಗರು ಮತದಾನ ಮಾಡಿದ್ದಾರೆಯೇ ಎಂಬ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಪ್ರತಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುವವರ ಮಾಹಿತಿಯನ್ನು ಸಂಗ್ರಹಿಸಿ ಅವರ ನಾಗರಿಕತ್ವವನ್ನು ಖಚಿತಪಡಿಸಿಕೊಳ್ಳಬೇಕೆಂದು ಸೂಚಿಸಿದ್ದಾರೆ.
ದೇಶದ ಭದ್ರತೆಯ ದೃಷ್ಟಿಯಿಂದ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕೇಂದ್ರ ಸರ್ಕಾರ ನಡೆಸುತ್ತಿರುವ ಕಾರ್ಯಾಚರಣೆಗೆ ರಾಜ್ಯ ಸರ್ಕಾರ ರಾಜಕೀಯ ಭಿನ್ನಾಭಿಪ್ರಾಯ ಬದಿಗಿಟ್ಟು ಸಹಕಾರ ನೀಡಬೇಕೆಂದು ಶಾಸಕ ಡಾ. ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
