



ಬಂಟ್ವಾಳ: ರಾಜ್ಯದ ಗಮನ ಸೆಳೆದ ಕಕ್ಯಪದವು ಲಾವಣ್ಯ ಹತ್ಯೆ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ ಬಂಧಿತ ಆರೋಪಿ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಚೇತನ್ (22)ಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಜುಲೈ 16ರಂದು ಕಕ್ಯಪದವಿನ ನಿವಾಸಿ ಲಾವಣ್ಯ, ಬಿ.ಸಿ.ರೋಡ್ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಚೇತನ್ ತಲವಾರಿನಿಂದ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದ. ಈ ಭೀಕರ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

ಮರುದಿನ ಮಂಗಳೂರಿನ ಪಚ್ಚನಾಡಿಯಲ್ಲಿ ಆರೋಪಿ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದ ವೇಳೆ ಆತ ವಿಷ ಸೇವಿಸಿದ್ದಾಗಿ ತಿಳಿಸಿದ್ದ. ಬಳಿಕ ಬಂಟ್ವಾಳ ಸರ್ಕಾರಿ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.
ಸುಮಾರು 11 ದಿನಗಳ ಚಿಕಿತ್ಸೆಯ ಬಳಿಕ ಆರೋಪಿ ಗುಣಮುಖನಾಗಿದ್ದರಿಂದ ಪೊಲೀಸರು ಆತನನ್ನು ಕಸ್ಟಡಿಗೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಈ ಅವಧಿಯಲ್ಲಿ ಕೃತ್ಯ ನಡೆದ ಸ್ಥಳ, ಆಯುಧ ಖರೀದಿಸಿದ ಸ್ಥಳ ಸೇರಿದಂತೆ ವಿವಿಧ ಕಡೆಗಳಿಗೆ ಕರೆದೊಯ್ದು ಮಹಜರು ನಡೆಸಲಾಗಿದೆ.
ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ಆರೋಪಿಗೆ ಇದೀಗ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
