




ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

2025ರ ಜೂನ್ 23ರಂದು ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಅಂದಿನ ತನಿಖಾಧಿಕಾರಿಗಳಾದ ಪಿಎಸ್‌ಐ ಕೀರಪ್ಪ ಘಟಕಾಂಬಳೆ ಹಾಗೂ ಪಿಎಸ್‌ಐ ಕೃಷ್ಣಕಾಂತ ಪಾಟೀಲ್ ನಡೆಸಿ, ಆರೋಪಿ ಮಣಿನಾಲ್ಕೂರು ನಿವಾಸಿ ಮೋನಪ್ಪ ನಾಯ್ಕ (52) ವಿರುದ್ಧ ಸೂಕ್ತ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎಫ್‌ಟಿಎಸ್‌ಸಿ–1 ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮೋಹನ್ ಜೆ.ಎಸ್. ಅವರು ಆರೋಪಿಯನ್ನು ವಿವಿಧ ಆರೋಪಗಳಲ್ಲಿ ದೋಷಿ ಎಂದು ತೀರ್ಪು ನೀಡಿದ್ದು, ಒಟ್ಟು 2 ವರ್ಷ 6 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ ₹40 ಸಾವಿರ ದಂಡ ವಿಧಿಸಿದ್ದಾರೆ. ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ (Concurrent) ಜಾರಿಯಾಗಲಿವೆ ಎಂದು ನ್ಯಾಯಾಲಯ ಆದೇಶಿಸಿದೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಸಹನಾದೇವಿ ಸಮರ್ಥವಾಗಿ ವಾದ ಮಂಡಿಸಿದ್ದರು.
