




ಬಂಟ್ವಾಳ ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆಗಸ್ಟ್ 12ರಂದು ಬಂಟ್ವಾಳ ಕಾವಳಪಡೂರು ವ್ಯಾಪ್ತಿಯಲ್ಲಿ ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂ.ಡಿ.ಎಂ.ಎ, 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ್ದ ಕಾರು ಹಾಗೂ ಐದು ಮೊಬೈಲ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡ್ಯಾರ್ ಮಂಗಳೂರಿನ ನಾಶೀರ್ ಹುಸೇನ್, ಗೋಳ್ತಮಜಲಿನ ಮಹಮ್ಮದ್ ಜುನೈದ್ ಹಾಗೂ ಕಂಕನಾಡಿಯ ಮೊಹಮ್ಮದ್ ಅಫ್ರೀದಿ ಎಂಬ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ., ಪಿಎಸ್‌ಐ ರನ್ನ ಗೌಡ ಎಸ್. ಪಾಟೀಲ್, ಪ್ರೊಬೇಷನರಿ ಪಿಎಸ್‌ಐಗಳಾದ ಶಿವರಾಮ್ ಹಾಗೂ ಫಕೀರಪ್ಪ ಸೇರಿದಂತೆ ಪೊಲೀಸ್ ಸಿಬ್ಬಂದಿ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿ ಭಾಗವಹಿಸಿದ್ದರು.
