




ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದ ಗುಡ್ಡೆಯಲ್ಲಿ ವೃದ್ಧೆಯೊಬ್ಬರಿಂದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದೊಯ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೃದ್ಧೆಯ ಮೊಮ್ಮಗನನ್ನೇ ಪೊಲೀಸರು ಬಂಧಿಸಿದ್ದಾರೆ.

ಆ.14ರಂದು 82 ವರ್ಷದ ಅವ್ವಮ್ಮ ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದ ಅಪರಿಚಿತ ವ್ಯಕ್ತಿಯೊಬ್ಬರು ಅವರ ಎರಡು ಕೈಗಳಲ್ಲಿದ್ದ ಸುಮಾರು 40 ಗ್ರಾಂ ತೂಕದ, ₹5 ಲಕ್ಷ ಮೌಲ್ಯದ ಎರಡು ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಹೋಗಿದ್ದ. ಈ ವೇಳೆ ಅವ್ವಮ್ಮ ಅವರ ಕೈಗೆ ರಕ್ತಗಾಯವಾಗಿತ್ತು. ಈ ಬಗ್ಗೆ ಅವರ ಪುತ್ರ ಸಾದಿಕ್ ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆ.16ರಂದು ಬಂಟ್ವಾಳ ತೆಂಕಕಜೆಕಾರು ನಿವಾಸಿ ಹಾಗೂ ಅವ್ವಮ್ಮ ಅವರ ಮೊಮ್ಮಗ ಶಬೀರ್ (33) ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಎರಡು ಚಿನ್ನದ ಬಳೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ಕ್ರಮ ಕೈಗೊಳ್ಳಲಾಗಿದೆ.
ಬೆಳ್ತಂಗಡಿ ಪೊಲೀಸ್ ಉಪಾಧೀಕ್ಷಕಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್., ಪುಂಜಾಲಕಟ್ಟೆ ಠಾಣಾ ಪಿ.ಎಸ್.ಐ ರಾಜೇಶ್ ಕೆ.ವಿ. ಹಾಗೂ ಪೊಲೀಸ್ ಸಿಬ್ಬಂದಿ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
