




ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೇವಸ್ಥಾನಗಳ ಕಾಣಿಕೆ ಡಬ್ಬಿ ಕಳ್ಳತನ ಹಾಗೂ ಕಳ್ಳತನಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಂತರ್‌ರಾಜ್ಯ ಕಳ್ಳನನ್ನು ಬಂಧಿಸಿ, ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಟ್ಟಂಪಾಡಿ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳ್ಳತನ, ನಿಡ್ಪಳ್ಳಿ ಶ್ರೀ ಶಾಂತದುರ್ಗ ದೇವಸ್ಥಾನದ ಕಾಣಿಕೆ ಡಬ್ಬಿ ಕಳ್ಳತನಕ್ಕೆ ಯತ್ನ ಹಾಗೂ ಪಡುವನ್ನೂರು ಗ್ರಾಮದ ಪಡುಮಲೆ ಶ್ರೀ ಆದಿಶಕ್ತಿ ದೇವಿ ಸನ್ನಿಧಿಯ ಕಾಣಿಕೆ ಡಬ್ಬಿ ಕಳ್ಳತನಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಯ ಪತ್ತೆಗಾಗಿ ಪೊಲೀಸರು ಕೇರಳ ರಾಜ್ಯದ ಕಿನ್ನಿಗಾರು, ಬದಿಯಡ್ಕ ಹಾಗೂ ಆದೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ತನಿಖೆ ನಡೆಸಿದ್ದರು. ತನಿಖೆಯ ವೇಳೆ ಕೇರಳದ ಬದಿಯಡ್ಕದಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ್ ಎಂಬ 31 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ ಕಳ್ಳತನ ಮಾಡಿದ್ದ ಕಾಣಿಕೆ ಡಬ್ಬಿ ಹಾಗೂ ಕಳ್ಳತನಕ್ಕೆ ಬಳಸಿದ್ದ ಹೊಂಡಾ ಎಸ್‌ಪಿ ಶೈನ್ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ಸುಮಾರು ಒಂದು ಲಕ್ಷ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಯ ವಿರುದ್ಧ ಈಗಾಗಲೇ ಕೇರಳದ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಅಡಿಕೆ ಕಳ್ಳತನ ಪ್ರಕರಣ ದಾಖಲಾಗಿದ್ದು, ದೇವಸ್ಥಾನಗಳ ಕಾಣಿಕೆ ಡಬ್ಬಿ ಹಾಗೂ ಅಡಿಕೆ ಕಳ್ಳತನದಲ್ಲಿ ಭಾಗಿಯಾಗಿರುವ ಆರೋಪಿಯೆಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐಗಳಾದ ಗುಣಪಾಲ ಜೆ. ಹಾಗೂ ಸುಷ್ಮಾ ಜಿ. ಭಂಡಾರಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಠಾಣೆಯ ಸಿಬ್ಬಂದಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಭಾಗವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಸಿಡಿಆರ್ ವಿಭಾಗದ ಸಂಪತ್ ಮತ್ತು ದಿವಾಕರ್ ಅವರು ತನಿಖೆಗೆ ಸಹಕರಿಸಿದ್ದಾರೆ.
