




ಕಡಬ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಗ್ರಾಮದ ವಿದ್ಯಾನಗರದಲ್ಲಿ ಯು-ಟರ್ನ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಇಂದು ನೆಲ್ಯಾಡಿ ಯು-ಟರ್ನ್ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಲಿದೆ.

ಬೆಳಗ್ಗೆ 9.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನೆಲ್ಯಾಡಿಯ ಗಾಂಧೀ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಪೊಲೀಸ್ ಇಲಾಖೆ ಷರತ್ತುಬದ್ಧ ಅನುಮತಿ ನೀಡಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆ ಉಂಟುಮಾಡುವುದಿಲ್ಲ ಎಂದು ಸಂಘಟಕರು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಈ ಅನುಮತಿ ನೀಡಲಾಗಿದೆ.
ಆದರೆ ಸಾಮಾಜಿಕ ಜಾಲತಾಣಗಳಲ್ಲಿ ರಸ್ತೆ ತಡೆ ನಡೆಸಲಾಗುವುದು ಎಂಬ ವದಂತಿಗಳು ಹರಿದಾಡುತ್ತಿವೆ. ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡಿದರೆ, ಪ್ರತಿಭಟನೆಯ ಆಯೋಜಕರು, ಸಂಘಟಕರು ಹಾಗೂ ಭಾಗವಹಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
