



ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ಆಧರಿಸಿ ತನಿಖೆಗೆ ಆಗ್ರಹಿಸಿ ಹೋರಾಟಗಳು ನಡೆಯುತ್ತಿರುವ ಸಂದರ್ಭದಲ್ಲಿ, ಈ ಎಲ್ಲಾ ಪ್ರಕರಣಗಳನ್ನು ಎಸ್ ಐ ಟಿ ಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಪ್ರಕರಣದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ.

ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ.
ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಹಿರಿಯ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ, ಸದಸ್ಯರಾಗಿ ಐಪಿಎಸ್ ಅಧಿಕಾರಿಗಳಾದ ಎಂ ಎನ್ ಅನುಚೇತ್, ಸೌಮ್ಯಲತಾ, ಜೀತೇಂದ್ರಕುಮಾರ್ ದಾಯಮ ಅವರನ್ನು ನೇಮಿಸಲಾಗಿದೆ.
