



ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಸಂಬಂಧ ಬೆಳೆಸಿ, ಬಳಿಕ ವಂಚಿಸಿರುವ ಆರೋಪ ಎದುರಿಸುತ್ತಿರುವ ಕೃಷ್ಣ ಜೆ. ರಾವ್ ವಿರುದ್ಧದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ.


ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಸ್ತಾವನೆಯನ್ನು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ರಾಜಿ ಸಂಧಾನ ಪ್ರಕ್ರಿಯೆಯ ಮಧ್ಯಸ್ಥಿಕೆದಾರರಾಗಿ ಪದಾಂಕಿತ ಹಿರಿಯ ವಕೀಲೆ ಎಸ್. ಸುಶೀಲಾ ಅವರನ್ನು ನೇಮಕಗೊಳಿಸಿದೆ.

ತನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಪಿ.ಪಿ. ಹೆಗ್ಡೆ ಅವರು, ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಕುರಿತು ನ್ಯಾಯಾಲಯದ ಗಮನ ಸೆಳೆದಿದ್ದರು.
ಈ ಪ್ರಸ್ತಾವನೆಯನ್ನು ಪುರಸ್ಕರಿಸಿದ್ದ ನ್ಯಾಯಪೀಠ, ಸಂತ್ರಸ್ತೆ, ಆರೋಪಿ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರೂ ಜೂನ್ 19ರಂದು ಮಧ್ಯಸ್ಥಿಕೆ ಕೇಂದ್ರದ ಮುಂದೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಿತ್ತು. ಜೊತೆಗೆ ಪ್ರಕರಣದ ಮುಂದಿನ ವಿಚಾರಣೆಯನ್ನು ಜೂನ್ 30ಕ್ಕೆ ಮುಂದೂಡಲಾಗಿದೆ.
ಇದೀಗ ರಾಜಿ ಸಂಧಾನ ಪ್ರಕ್ರಿಯೆ ಸುಗಮವಾಗಿ ನಡೆಯುವ ನಿಟ್ಟಿನಲ್ಲಿ ಹಿರಿಯ ವಕೀಲೆ ಎಸ್. ಸುಶೀಲಾ ಅವರನ್ನು ಅಧಿಕೃತ ಮಧ್ಯಸ್ಥಿಕೆದಾರರಾಗಿ ನೇಮಕಗೊಳಿಸಲಾಗಿದ್ದು, ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಸಾರ್ವಜನಿಕರ ಗಮನ ನೆಟ್ಟಿದೆ.
