



ಸುಬ್ರಹ್ಮಣ್ಯ: ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಸ್ಲೆ ರಸ್ತೆಯ ಡಿಪ್ಪೋ ಬಳಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಸುಬ್ರಹ್ಮಣ್ಯ ಪೊಲೀಸರು ಪತ್ತೆಹಚ್ಚಿದ್ದಾರೆ.


ಜೂನ್ 13, 2026ರಂದು ಬೆಳಗ್ಗೆ KA-13 D 1923 ಸಂಖ್ಯೆಯ ಪಿಕಪ್ ವಾಹನ ಆಯತಪ್ಪಿ ಬಿದ್ದ ಘಟನೆ ನಡೆದಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ವಾಹನ ಹಾಗೂ ಅದರ ಚಾಲಕ ಹಾಸನ ಜಿಲ್ಲೆಯ ಅರಕಲಗೂಡು ನಿವಾಸಿ ಚಂದ್ರು @ ಚಂದ್ರಶೇಖರ ಮತ್ತು ಕ್ಲೀನರ್ ಮೋಹನ ಅವರನ್ನು ಠಾಣೆಗೆ ಕರೆತರಲಾಗಿತ್ತು.

ಈ ವೇಳೆ ಸದ್ರಿ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟ ನಡೆಯುತ್ತಿದ್ದ ಕುರಿತು ದೊರೆತ ಮಾಹಿತಿಯ ಆಧಾರದಲ್ಲಿ ಆಂಜನೇಯ ರೆಡ್ಡಿ, ಪೊಲೀಸ್ ಉಪನಿರೀಕ್ಷಕರು, ಆರೋಪಿಗಳನ್ನು ವಿಚಾರಣೆ ನಡೆಸಿದರು. ವಿಚಾರಣೆಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಎರಡು ಜಾನುವಾರುಗಳನ್ನು ಮಾಂಸ ಮಾರಾಟ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದಾಗಿ ತಿಳಿದುಬಂದಿದೆ. ವಾಹನ ಅಪಘಾತಕ್ಕೀಡಾದ ಬಳಿಕ ಜಾನುವಾರುಗಳನ್ನು ವಾಹನದಿಂದ ಇಳಿಸಿ ಓಡಿಸಿರುವುದನ್ನೂ ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಘಟನಾ ಸ್ಥಳದ ಸಮೀಪದಲ್ಲೇ ಎರಡು ಜಾನುವಾರುಗಳನ್ನು ಪತ್ತೆಹಚ್ಚಿ, ಅವುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಗೋವುಗಳ ಸಂರಕ್ಷಣಾ ಮತ್ತು ಜಾನುವಾರು ಪ್ರತಿಬಂಧಕ ಕಾಯ್ದೆ-2020ರ ಕಲಂ 4, 5, 7, 12, ಪ್ರಾಣಿ ಸಂರಕ್ಷಣಾ ಕಾಯ್ದೆ-1960ರ ಕಲಂ 11(1)(D) ಹಾಗೂ ಭಾರತೀಯ ಮೋಟಾರು ವಾಹನ ಕಾಯ್ದೆ-1988ರ ಕಲಂ 66, 192(A) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
